ಕಿರುಕುಳ ನೀಡಿದರೆ ಮೈಕ್ರೋ ಫೈನಾನ್ಷಿಯರ್‌ಗಳ ವಿರುದ್ಧ ಕ್ರಿಮಿನಲ್ ಕೇಸ್ ಹಾಕಿ: ಡಿಸಿ ಗಳಿಗೆ ರಾಜ್ಯ ಸರ್ಕಾರ ಸೂಚನೆ

Kannada Nadu
ಕಿರುಕುಳ ನೀಡಿದರೆ ಮೈಕ್ರೋ ಫೈನಾನ್ಷಿಯರ್‌ಗಳ ವಿರುದ್ಧ ಕ್ರಿಮಿನಲ್ ಕೇಸ್ ಹಾಕಿ: ಡಿಸಿ ಗಳಿಗೆ ರಾಜ್ಯ ಸರ್ಕಾರ ಸೂಚನೆ

ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳ ನೀಡುವುದು ಕಂಡುಬಂದರೆ ಕ್ರಿಮಿನಲ್ ಪ್ರಕರಣ ದಾಖಲಿಸಿ ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ರಾಜ್ಯ ಸರ್ಕಾರ ಖಡಕ್ ಸೂಚನೆ ನೀಡಿದೆ. ವಿಕಾಸಸೌಧದಲ್ಲಿ ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪೆನಿಗಳು 59 ಸಾವಿರ ಕೋಟಿ ರೂ. ಸಾಲ ನೀಡಿವೆ. ಅಲ್ಲದೆ, ತಮ್ಮ ಸಾಮರ್ಥ್ಯ ವಿಸ್ತರಿಸಿಕೊಳ್ಳುವ ಸಲುವಾಗಿ ಆರ್ ಬಿಐ ಗೈಡ್ಲೈನ್ಸ್ ಉಲ್ಲಂಘಿಸಿ ಸಾಲ ನೀಡುತ್ತಿವೆ. ಸಾಲ ನೀಡುವಾಗ ಸಾಲ ಪಡೆದವರ ಆರ್ಥಿಕ ಸಾಮರ್ಥ್ಯವನ್ನು ಕಡೆಗಣಿಸಲಾಗುತ್ತಿರುವುದು ಅಹಿತಕರ ಪ್ರಸಂಗಗಳಿಗೆ ಕಾರಣವಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಒಬ್ಬ ವ್ಯಕ್ತಿಗೆ 2 ಲಕ್ಷಕ್ಕಿಂತ ಹೆಚ್ಚು ಸಾಲ ನೀಡಬಾರದು ಎಂದು ಆರ್‌ಬಿಐ ಮಾರ್ಗಸೂಚಿ ಇದೆ. ಇದನ್ನು ಯಾರೂ ಅನುಸರಿಸುತ್ತಿಲ್ಲ. ಓರ್ವ ವ್ಯಕ್ತಿಗೆ 5-6 ಲಕ್ಷ ರೂ. ಸಾಲ ನೀಡಲಾಗುತ್ತಿದೆ. ಈ ಮೂಲಕ ಬಡವರನ್ನು ಸಾಲದ ಸುಳಿಗೆ ಸಿಲುಕಿಸಲಾಗುತ್ತಿದೆ. ಸಾಲ ಮರುಪಾವತಿ ಮಾಡದಿದ್ದರೆ ಮೈಕ್ರೋ ಫೈನಾನ್ಸ್ ಕಂಪನಿಗಳ ಅಸ್ತಿತ್ವಕ್ಕೂ ತೊಂದರೆಯಾಗಲಿದೆ. ಹೀಗಾಗಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿಗಳು ಈ ವಾರದೊಳಗೆ ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರ ಜೊತೆಗೆ ಸಭೆ ನಡೆಸಿ, ಸಾಲ ವಸೂಲಾತಿಗೆ ಆರ್‌ಬಿಐ ನಿಗದಿಪಡಿಸಿರುವ ಮಾದರಿ ಕಾರ್ಯಾಚರಣೆಯನ್ನು ಪಾಲನೆ ಮಾಡಲು ಹಾಗೂ ಬೇಜಾಬ್ದಾರಿಯಿಂದ ಸಾಲ ನೀಡುವುದನ್ನೂ ನಿಗ್ರಹಿಸಬೇಕೆಂದು ಸೂಚನೆ ನೀಡಿದರು.

ಮೈಕ್ರೋ ಫೈನಾನ್ಸ್ ಕಂಪನಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಕೇಂದ್ರ ಸರ್ಕಾರ ಯಾವುದೇ ವಿಶೇಷ ಅಧಿಕಾರ ನೀಡಿಲ್ಲ. ಆದರೆ, ರಾಜ್ಯ ಸರ್ಕಾರವೇ ತನ್ನ ಅಧಿಕಾರದ ಮಿತಿಯಲ್ಲಿ ಬೇರೆ ಬೇರೆ ಕಾನೂನುಗಳ ಮೂಲಕ ಮೈಕ್ರೋ ಫೈನಾನ್ಸ್‌ಗಳ ಅಕ್ರಮಗಳಿಗೆ ಕಡಿವಾಣ ಹಾಕಲಿದೆ. ಇಂತಹ ಕಂಪನಿಗಳ ಅವ್ಯಾಹತ ಅಕ್ರಮಗಳನ್ನು ಕಂಡು ರಾಜ್ಯ ಸರ್ಕಾರ ಸುಮ್ಮನೆ ಕೂರಲು ಸಾಧ್ಯವಿಲ್ಲ. ಇದನ್ನು ಹೀಗೆ ಬಿಟ್ಟರೆ ಮುಂದಿನ ದಿನಗಳಲ್ಲಿ ಇನ್ನೂ ದೊಡ್ಡ ಮಟ್ಟದ ಅನಾಹುತಗಳು ಸಂಭವಿಸುವ ಸಾಧ್ಯತೆ ಇದೆ. ಹೀಗಾಗಿ ರಾಜ್ಯ ಸರ್ಕಾರ ಮಧ್ಯ ಪ್ರವೇಶಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದು ತಿಳಿಸಿದರು.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

error: Content is protected !!
";