TB ಡ್ಯಾಂ ಭರ್ತಿ:ಜಲಾಶಯ ವೀಕ್ಷಣೆಗೆ ಪ್ರವಾಸಿಗರ ದಂಡು!

ಹೊಸಪೇಟೆ: ಕಲ್ಯಾಣ ಕರ್ನಾಟಕದ ಜೀವನಾಡಿ ತುಂಗಭದ್ರಾ ಜಲಾಶಯದ ಎಲ್ಲಾ 33 ಗೇಟ್‌ಗಳನ್ನು ತೆರೆದು ನದಿಗೆ 1,47,516 ಕ್ಯುಸೆಕ್ ನೀರು ಹರಿಸಿರುವ ಹಿನ್ನೆಲೆಯಲ್ಲಿ ಜಲಾಶಯದ ವೀಕ್ಷಣೆಗೆ ಜನರು ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ. ಇನ್ನೂ ಹಂಪಿಯಲ್ಲೂ ಪ್ರವಾಸಿಗರು ಹೆಚ್ಚಿದ್ದಾರೆ.

 

ಜಲಾಶಯದ ಒಳ ಹರಿವು ತಗ್ಗದ್ದರಿಂದ ಭಾನುವಾರ ಕೂಡ ಭಾರೀ ಪ್ರಮಾಣದಲ್ಲಿ ನೀರು ನದಿಗೆ ಹರಿಸಲಾಗಿದೆ. ಈಗಾಗಲೇ ಹಂಪಿಯ ಪುರಂದರದಾಸರ ಮಂಟಪ ಸಂಪೂರ್ಣ ಮುಳುಗಡೆಯಾಗಿದೆ. ರಘುನಂದನ ತೀರ್ಥರ ಬೃಂದಾವನ, ಸುಗ್ರೀವ ಗುಹೆ, ಸೀತೆ ಸೆರಗು, ವಿಷ್ಣುವಿನ ದಶಾವತಾರ ಉಬ್ಬು ಶಿಲ್ಪಗಳು, ಕೋಟಿಲಿಂಗ ಜಲಾವೃತವಾಗಿವೆ. ಧಾರ್ಮಿಕ ವಿಧಿವಿಧಾನ ನೆರವೇರಿಸುವ ಮಂಟಪ, ಸ್ನಾನಘಟ್ಟ, ವಿಷ್ಣು ಮಂಟಪ, ತುಂಗಾರತಿ ಸ್ಥಳ, ಕಾಲು ಸೇತುವೆ, ಜನಿವಾರ ಮಂಟಪಗಳು ಸಂಪೂರ್ಣ ಮುಳುಗಡೆಯಾಗಿವೆ. ಕೋದಂಡರಾಮಸ್ವಾಮಿ ದೇವಾಲಯದ ಬಳಿಯ ಮಂಟಪಗಳು ಕೂಡ ಜಲಾವೃತವಾಗಿವೆ.

ಹಂಪಿಯ ಚಕ್ರತೀರ್ಥದ ಬಳಿ ಭಾರೀ ಪ್ರಮಾಣದಲ್ಲಿ ನೀರು ನದಿಯಲ್ಲಿ ಹರಿಯುತ್ತಿದೆ. ಈಗಾಗಲೇ ಹರಿಗೋಲು ಹಾಗೂ ಬೋಟಿಂಗ್ ಸ್ಥಗಿತಗೊಳಿಸಲಾಗಿದೆ. ಹಂಪಿ ತುಂಗಭದ್ರಾ ನದಿ ತೀರದಲ್ಲಿ ಭದ್ರತೆಗೆ ಪೊಲೀಸರನ್ನು ಕೂಡ ನಿಯೋಜನೆ ಮಾಡಲಾಗಿದೆ.

 

ಜಲಾಶಯದ ಒಳ ಹರಿವು 1,40,924 ಕ್ಯುಸೆಕ್ ಇದ್ದು, ಇನ್ನೂ ಏರುತ್ತಲೇ ಸಾಗುತ್ತಿದೆ. ಹಾಗಾಗಿ ಜಲಾಶಯದಿಂದ ಭಾರೀ ಪ್ರಮಾಣದ ನೀರು ನದಿಗೆ ಹರಿಸಲಾಗುತ್ತಿದೆ. ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ ಜಿಲ್ಲೆಗಳ ಜಿಲ್ಲಾಡಳಿತಗಳಿಗೆ ತುಂಗಭದ್ರಾ ಮಂಡಳಿ ಎಚ್ಚರಿಕೆ ಸಂದೇಶ ರವಾನಿಸಿದೆ. ಇನ್ನು ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳಿಗೂ ಎಚ್ಚರಿಕೆ ಸಂದೇಶ ರವಾನಿಸಲಾಗಿದೆ. ನದಿಪಾತ್ರದ ಜನರು ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಈಗಾಗಲೇ ಆಯಾ ಜಿಲ್ಲಾಡಳಿತಗಳು ಕ್ರಮವಹಿಸಿವೆ.

ಪ್ರವಾಸಿಗರ ದಂಡು: ತುಂಗಭದ್ರಾ ಜಲಾಶಯದಿಂದ ನದಿಗೆ ನೀರು ಬಿಟ್ಟಿರುವ ಹಿನ್ನೆಲೆಯಲ್ಲಿ 33 ಗೇಟ್‌ಗಳಿಂದ ನದಿಯಲ್ಲಿ ರಭಸವಾಗಿ ಹರಿಯುವ ನೀರನ್ನು ಕಣ್ಣದುಂಬಿಕೊಳ್ಳಲು ಜನರು ತಂಡೋಪತಂಡವಾಗಿ ಜಲಾಶಯಕ್ಕೆ ಬರುತ್ತಿದ್ದಾರೆ. ಈಗಾಗಲೇ ಜಲಾಶಯದಲ್ಲೂ ಪೊಲೀಸರು ಮುನ್ನೆಚ್ಚರಿಕಾ ಕ್ರಮಕೈಗೊಂಡಿದ್ದಾರೆ. 

ಇನ್ನೂ ಹಂಪಿಯ ತುಂಗಭದ್ರಾ ನದಿ ತೀರದಲ್ಲೂ ಜನರು ಆಗಮಿಸಿ ನದಿಯಲ್ಲಿ ಹರಿಯುತ್ತಿರುವ ನೀರನ್ನು ವೀಕ್ಷಿಸುತ್ತಿದ್ದಾರೆ. ಬಳಿಕ ಹಂಪಿಯ ಶ್ರೀವಿರೂಪಾಕ್ಷೇಶ್ವರ ದೇವರ ದರ್ಶನ ಪಡೆದು, ಸ್ಮಾರಕಗಳನ್ನು ವೀಕ್ಷಿಸುತ್ತಿದ್ದಾರೆ. ಹಂಪಿಯಲ್ಲಿ ಭಾರೀ ಪ್ರಮಾಣದಲ್ಲಿ ತುಂಗಭದ್ರಾ ನದಿಯಲ್ಲಿ ನೀರು ಹರಿಯುತ್ತಿರುವ ಹಿನ್ನೆಲೆಯಲ್ಲಿ ವೈಭವದ ಸೊಬಗು ಕಾಣಲು ಜನರು ಬರುತ್ತಿದ್ದಾರೆ.

Facebook
Twitter
LinkedIn
Telegram
Email
Print
WhatsApp

Leave a Comment

Your email address will not be published. Required fields are marked *

Translate »
Scroll to Top