ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿ : ಜಿಲ್ಲಾಧಿಕಾರಿ

ಡಿ.21 ರಿಂದ ಪೋಲಿಯೋ ಲಸಿಕಾ ಕಾರ್ಯಕ್ರಮ ಆರಂಭ.

Kannada Nadu
ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿ : ಜಿಲ್ಲಾಧಿಕಾರಿ

ವಿಜಯನಗರ(ಹೊಸಪೇಟೆ): ಜಿಲ್ಲಾದ್ಯಾಂತ ಇದೇ ಡಿ.21 ರಿಂದ 24 ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಆಯೋಜಿಸಿದ್ದು, ಐದು ವರ್ಷದೊಳಗಿನ ಯಾವುದೇ ಮಗುವು ಲಸಿಕೆಯಿಂದ ವಂಚಿತವಾಗದಂತೆ ನಿಗಾ ವಹಿಸಬೇಕೆಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಏರ್ಪಡಿಸಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಪೂರ್ವ ಸಿದ್ದತಾ ಸಭೆ, ಡಿಟಿಎಫ್ಐ ದಡಾರ ಮತ್ತು ರುಬೇಲ್ಲಾ ನಿರ್ಮೂಲನ ಕಾರ್ಯಕ್ರಮದ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಂಗಳವಾರ ಅವರು ಮಾತನಾಡಿದರು.
ಪೊಲೀಯೋ ಮುಕ್ತ ಭಾರತ ನಿರ್ಮಾಣಕ್ಕೆ ಸರ್ಕಾರಗಳು ಹೆಚ್ಚಿನ ಉತ್ತೇಜನ ನೀಡಿದ ಹಿನ್ನಲೆಯಲ್ಲಿ ಸದ್ಯಕ್ಕೆ ದೇಶದಲ್ಲಿ ಪೋಲಿಯೋ ಪ್ರಕರಣಗಳು ದಾಖಲಾಗದಿರುವುದು ಹೆಮ್ಮೆಯ ವಿಷಯ. ಅದರೂ ನೆರೆಯ ದೇಶಗಳಲ್ಲಿ ಪೊಲೀಯೋ ಹಾವಳಿ ಇರುವುದರಿಂದ ನಮ್ಮಲ್ಲಿ ನಿರ್ಲಕ್ಷ್ಯ ಸಲ್ಲದು.
ವಿವಿಧ ಇಲಾಖೆಗಳ ಸಹಕಾರ ತೆಗೆದುಕೊಂಡು ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮದ ಬಗ್ಗೆ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ಲಸಿಕೆಯ ಕುರಿತು ಹೆಚ್ಚಿನ ಜಾಗೃತಿ ಮೂಡಿಸಬೇಕು.
ಆರೋಗ್ಯ ಇಲಾಖೆ ಜತೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ ಯಶಸ್ವಿಗೊಳಿಸಬೇಕು. ಎಲ್ಲಾ ಶಾಲೆಗಳಲ್ಲಿ ಪ್ರಾರ್ಥನೆ ವೇಳೆ ವಿದ್ಯಾರ್ಥಿಗಳಿಗೆ ಪೊಲೀಯೋ ಕಾರ್ಯಕ್ರಮದ ಬಗ್ಗೆ ಅರಿವು ಮೂಡಿಸಿ. ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯತ್ ತ್ಯಾಜ್ಯ ವಿಲೇವಾರಿ ವಾಹನಗಳಲ್ಲಿ ಧ್ವನಿ ಮುದ್ರಿಕೆ ಮೂಲಕ ವ್ಯಾಪಕ ಪ್ರಚಾರ ನೀಡಬೇಕು. ಡಿ.21 ರಂದು ಗರಿಷ್ಟ ಪ್ರಮಾಣದ ಗುರಿ ಸಾಧಿಸಬೇಕು. 24 ರೊಳಗೆ ಸಂಪೂರ್ಣ ಗುರಿ ಸಾಧಿಸಲು ಅಗತ್ಯ ಕ್ರಮವಹಿಸಬೇಕು.
ಕಾರ್ಯಕ್ರಮಕ್ಕೆ ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ವಾಹನಗಳ ಪೂರೈಕೆ ಮಾಡಬೇಕು. ಅಧಿಕಾರಿಗಳು ವಿವಿಧ ಇಲಾಖೆಗಳ ಮತ್ತು ಸಂಘ ಸಂಸ್ಥೆಗಳ ಸಹಕಾರ ತೆಗೆದುಕೊಂಡು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಶೇ.100ಕ್ಕೆ 100 ರಷ್ಟು ಪ್ರಗತಿ ಸಾಧಿಸಬೇಕು ಎಂದರು.
ಶಿಶು ಮತ್ತು ಮಕ್ಕಳ ಮರಣ ಲೆಕ್ಕಪರಿಶೋಧನೆ ಸಭೆ : ಆಸ್ಪತ್ರೆಗೆ ಬರುವ ಗರ್ಭಿಣೆಯರಿಗೆ ತಪಾಸಣೆಯ ಜತೆಗೆ ಯಕೊ ಮತ್ತು ಇಸಿಜಿಯನ್ನು ಕಡ್ಡಾಯವಾಗಿ ಮಾಡಬೇಕು. ಎಲ್ಲಾ ಆಸ್ಪತ್ರೆಗಳಲ್ಲಿ ಗುಣಮಟ್ಟದ ಆರೋಗ್ಯ ಸೇವೆ ನೀಡುವಲ್ಲಿ ವೈದ್ಯರು ಸಮಯಕ್ಕೆ ಸರಿಯಾಗಿ ಆರೋಗ್ಯ ಕೇಂದ್ರದಲ್ಲಿದ್ದು ರೋಗಿಗಳ ತಪಾಸಣೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶಂಕರ್ ನಾಯ್ಕ್ ಎಲ್.ಆರ್ ಮಾತನಾಡಿ, ಜಿಲ್ಲೆಯಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ 5 ವರ್ಷದೊಳಗಿನ ಮಕ್ಕಳ ಸಂಖ್ಯೆ 1,21,585 ಇದ್ದು, ಜಿಲ್ಲೆಯಲ್ಲಿ ಒಟ್ಟು 1040 ಕೇಂದ್ರಗಳಲ್ಲಿ ಲಸಿಕೆ ಹಾಕಲಾಗುತ್ತದೆ. ಒಟ್ಟು 923 ತಂಡಗಳನ್ನು ರಚಿಸಲಾಗಿದೆ. 04 ಮೊಬೈಲ್ ತಂಡಗಳು ಹಾಗೂ ಬಸ್ ನಿಲ್ದಾಣ, ರೈಲ್ವೇ ಸ್ಟೆಷನ್ ಮತ್ತು ಪ್ರಮುಖ ವೃತ್ತಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ 50 ಟ್ರಾನ್ಸಿಟ್ ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ. 2170 ಲಸಿಕಾ ಕಾರ್ಯಕರ್ತರನ್ನು ನಿಯೋಜನೆ ಮಾಡಲಾಗಿದೆ. ಮೊದಲ ದಿನ ಬೂತ್ ಮಟ್ಟದಲ್ಲಿ ನಂತರ ಮೂರು ದಿನಗಳ ಕಾಲ ಮನೆ ಮನೆಗೆ ಭೇಟಿ ನೀಡಿ ಲಸಿಕೆ ಹಾಕಲಾಗುತ್ತದೆ ಎಂದರು.
ಈ ವೇಳೆ ಜಿಲ್ಲಾ ಆರ್ಸಿಹೆಚ್ ಅಧಿಕಾರಿ ಜಂಬಯ್ಯ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಷಣ್ಮುಖ ನಾಯ್ಕ, ಜಿಲ್ಲಾ ವೈದ್ಯಾಧಿಕಾರಿ ಡಾ.ಭಾಸ್ಕರ್, ಡಾ.ರಾಧಿಕಾ ಸೇರಿದಂತೆ ತಾಲೂಕು ವೈದ್ಯಾಧಿಕಾರಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

error: Content is protected !!
";