ಕೋವಿಡ್-19 ಮಾರ್ಗಸೂಚಿ ಅನುಸರಿಸಿ, ಸರ್ಕಾರಿ ನೌಕರರ ಕ್ರೀಡಾಕೂಟ ಏರ್ಪಡಿಸುವಂತೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಸೂಚನೆ

ದೇವನಹಳ್ಳಿ: ಕೋವಿಡ್-19 ಮಾರ್ಗಸೂಚಿ ಅನುಸರಿಸಿ ಶಿಷ್ಟಾಚಾರದ ಪ್ರಕಾರ, ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ “ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಜನವರಿ ಮಾಹೆಯಲ್ಲಿ ಆಯೋಜಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತಲ್ಲದೆ, ಒಳಾಂಗಣ, ಹೊರಾಂಗಣ, ವೈಯಕ್ತಿಕ ಹಾಗೂ ಗುಂಪು ಸ್ಪರ್ಧೆಗಳಿಗನುಗುಣವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಆರ್.ಎಲ್.ಜಾಲಪ್ಪ ಕಾಲೇಜು, ಕೊಂಗಾಡಿಯಪ್ಪ ಕಾಲೇಜು ಹಾಗೂ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಆಯೋಜಿಸಲಾಗುವುದು. ಕ್ರೀಡಾಕೂಟ ನಡೆಯುವ ಸ್ಥಳಗಳಲ್ಲಿ ಆಂಬ್ಯುಲೆನ್ಸ್ ಹಾಗೂ ಸಿಬ್ಬಂದಿಗಳನ್ನು ನಿಯೋಜನೆ ಮಾಡಲು ಆರೋಗ್ಯ ಇಲಾಖೆ ಅಧಿಕಾರಿಗೆ ತಿಳಿಸಿದರಲ್ಲದೆ, ತಾಲ್ಲೂಕು ಮಟ್ಟ ಹಾಗೂ ಜಿಲ್ಲಾ ಮಟ್ಟದ ಕ್ರೀಡಾಕೂಟ ನಡೆಯುವಾಗ ಸ್ಥಳೀಯ ನಗರಸಭೆ ಹಾಗೂ ಪುರಸಭೆಗಳಿಂದ ನೀರು ಸರಬರಾಜು ಮತ್ತು ಸ್ವಚ್ಛತೆ ಕಾಪಾಡುವಂತಹ ಕಾರ್ಯವಾಗಬೇಕು. ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಗೊಂದಲಕ್ಕೆ ಅವಕಾಶ ನೀಡದೆ, ತಾಲ್ಲೂಕು ಮಟ್ಟದಲ್ಲಿ ವಿಜೇತರಾದವರು ಮಾತ್ರವೇ ಜಿಲ್ಲಾಮಟ್ಟದಲ್ಲಿ ಪಾಲ್ಗೊಳ್ಳಲು ಅವಕಾಶ ಎಂದು ತಿಳಿಸಿದರು.


ಸಾರ್ವಜನಿಕರ ಹಿತ ಕಾಪಾಡುವುದು ಹಾಗೂ ಶಿಸ್ತುಬದ್ಧವಾಗಿರುವುದು ಸರ್ಕಾರಿ ನೌಕರರ ಆದ್ಯ ಕರ್ತವ್ಯವಾಗಿದೆ. ತಾಲ್ಲೂಕು ಮಟ್ಟದ ಕ್ರೀಡಾಕೂಟವನ್ನು ಜನವರಿ ಮೊದಲ ವಾರದೊಳಗೆ ತಹಶೀಲ್ದಾರ್ ಅವರ ಸಹಕಾರದೊಂದಿಗೆ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಬೇಕು ಎಂದು ತಿಳಿಸಿದರು. ಕ್ರೀಡಾಕೂಟ ಆಯೋಜನೆಗೆ ದೈಹಿಕ ಶಿಕ್ಷಕರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರ ಅಗತ್ಯವಾಗಿದ್ದು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನಗರಸಭೆ, ಪುರಸಭೆ ಹಾಗೂ ಗ್ರಾಮ ಪಂಚಾಯಿತಿಗಳ ಹಣಕಾಸಿನ ನೆರವಿನೊಂದಿಗೆ ಕ್ರೀಡಾಕೂಟ ನಡೆಯಲಿದೆ ಎಂದು ತಿಳಿಸಿದರು. ಸಭೆಯಲ್ಲಿ ಅಪರ‌‌ ಜಿಲ್ಲಾಧಿಕಾರಿ ವಿಜಯ.ಈ.ರವಿಕುಮಾರ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಸುಮಾ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಭವ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಮಂಜುನಾಥ ಆರಾಧ್ಯ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಆರ್.ಗೀತಾ, ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಗಂಗಾಧರಪ್ಪ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

Translate »
Scroll to Top