ಬೆಂಗಳೂರು: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದ್ದು, ಇದರ ಬೆನ್ನಲ್ಲೇ ಸಚಿವ ಬಿ ನಾಗೇಂದ್ರ ಅವರು ಗುರುವಾರ ಮಧ್ಯಾಹ್ನ ರಾಜೀನಾಮೆ ಸಲ್ಲಿಸಿದ್ದಾರೆ. ಇದರಿಂದ ಭ್ರಷ್ಟಾಚಾರ ಆರೋಪದ ಮೇಲೆ ರಾಜೀನಾಮೆ ಸಲ್ಲಿಸಿದ ಮೊದಲ ಸಚಿವ ಎಂಬ ಅಪಖ್ಯಾತಿಗೆ ಒಳಗಾಗಿದ್ದಾರೆ ಸಚಿವ ನಾಗೇಂದ್ರ ಅವರು.
ಎಸ್‌ಟಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ ಬಳಿಕ ಬಹುಕೋಟಿ ಹಗರಣ ಬಯಲಿಗೆ ಬಂದಿದ್ದು, ಸಚಿವ ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳು ಪಟ್ಟು ಹಿಡಿದಿದ್ದವು. ಇದೀಗ ರಾಜೀನಾಮೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದರು. ಇದಕ್ಕೆ ತಲೆ ಬಾಗಿದ ಸಚಿವ ನಾಗೇಂದ್ರ ರಾಜಿನಾಮೆ ಸಲ್ಲಿಸಿದ್ದಾರೆ.
ಬಹುಕೋಟೆ ಹಗರಣದಲ್ಲಿ ತಮ್ಮ ಹೆಸರು ಕೇಳಿ ಬಂದಿರೋದ್ರಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಿ. ನಾಗೇಂದ್ರಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದರು. ಅಂತೆಯೇ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಚಿವ ನಾಗೇಂದ್ರರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಿದ್ದು, ಕಾವೇರಿ ನಿವಾಸಕ್ಕೆ ಕರೆದುಕೊಂಡು ಇಬ್ಬರು ನಾಯಕರು ರಾಜೀನಾಮೆ ನೀಡುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿತ್ತು.
ಬಹುಕೋಟಿ ಹಗರಣದಲ್ಲಿ ಸಚಿವ ನಾಗೇಂದ್ರ ಹೆಸರು ಪ್ರಬಲವಾಗಿ ಕೇಳಿ ಬರುತ್ತಿದೆ. ಇದರ ಬೆನ್ನಲ್ಲೇ ನಾಗೇಂದ್ರ ಪಿಎ ನೆಕ್ಕಂಟಿ ನಾಗರಾಜ್‌ನನ್ನು ಎಸ್‌ಟಿಐ ಬಂಧಿಸಿದೆ. ಮತ್ತೊಂದೆಡೆ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯವರು ರಾಜ್ಯಪಾಲರಿಗೆ ದೂರು ನೀಡಿದರು. ಈ ಎಲ್ಲಾ ಬೆಳವಣಿಗೆಗಳಿಂದ ಸಚಿವ ನಾಗೇಂದ್ರ ಅವರು ರಾಜಿನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ನಾಲ್ಕು ಬಾರಿ ಶಾಸಕರಾಗಿದ್ದ ನಾಗೇಂದ್ರ ಅವರು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದಿಂದ ಕಾರ್ಪೊರೇಟ್ ಸಂಸ್ಥೆಗಳಿಗೆ 187.3 ಕೋಟಿ ರೂಪಾಯಿ ಅಕ್ರಮ ವರ್ಗಾವಣೆಯಲ್ಲಿ ಭಾಗಿಯಾಗಿದ್ದಾರೆಂಬ ಆರೋಪಗಳು ಕೇಳಿ ಬಂದಿವೆ. ಪ್ರಕರಣ ಸಂಬಂಧ ಕಾರ್ಪೊರೇಷನ್ ಸೂಪರಿಂಟೆಂಡೆಂಟ್ ಚಂದ್ರಶೇಖರನ್ 12 ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್ ನೋಟ್ ನಲ್ಲಿ ಸಚಿವರ ಹೆಸರನ್ನು ಉಲ್ಲೇಖಿಸದೇ ಮೌಖಿಕ ಆದೇಶ ಎಂದು ಬರೆದಿದ್ದರು. ಯೂನಿಯನ್ ಬ್ಯಾಂಕ್ ಹಿರಿಯ ಅಧಿಕಾರಿಗಳ ಪತ್ರದ ಅನ್ವಯ ಸಿಬಿಐ ಕೂಡ ಈಗಾಗಲ ಐವರು ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದೆ. ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ ಕೂಡ ಈಗಾಗಲೇ ಪ್ರಕರಣದ ತನಿಖೆ ಆರಂಭಿಸಿದೆ.
ಅಂತೆಯೇ ಈ ಬಗ್ಗೆ ಮಾತನಾಡಿದ ಸಚಿವ ನಾಗೇಂದ್ರ ಅವರು ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣದ ತನಿಖೆ ನಡೆಯುತ್ತಿರುವುದರಿಂದ ಸರ್ಕಾರಕ್ಕೆ ಮುಜುಗರ ತರಬಾರದೆಂದು ನೈತಿಕತೆಯಿಂದ ರಾಜೀನಾಮೆ ಮಾಡಿರುವೆ. ಹಗರಣದಲ್ಲಿ ನನ್ನ ಪಾತ್ರ ಇಲ್ಲ. ತನಿಖೆ ನಂತರ ಆರೋಪ ಮುಕ್ತನಾಗಿ ಹೊರ ಬರುವೆ ಎಂದಿದ್ದಾರೆ .