ನಿಮ್ಮ ಕಾಂಗ್ರೆಸ್‌‍ ಪಡಸಾಲೆಯಲ್ಲೇ ನಿಮಗೆ ಉತ್ತರ ಸಿಗಲಿದೆ : ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಬೆಂಗಳೂರು: ಯಾರು ಯಾರ ವಿರುದ್ಧ ಮುಗಿ ಬೀಳುತ್ತಾರೆ? ಯಾರು ಎಲ್ಲಿರುತ್ತಾರೆ? ಎಂಬುದನ್ನು ಕೆಲವೇ ದಿನಗಳು ಕಾದುನೋಡಿ. ನಿಮ್ಮ ಕಾಂಗ್ರೆಸ್‌‍ ಪಡಸಾಲೆಯಲ್ಲೇ ನಿಮಗೆ ಉತ್ತರ ಸಿಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕುಟುಕಿದ್ದಾರೆ.

ಬಿಜೆಪಿಯಲ್ಲಿ ವಿಜಯೇಂದ್ರ ಅವರ ಸ್ಥಾನವನ್ನು ಕಿತ್ತುಕೊಳ್ಳಲು ಪಕ್ಷದಲ್ಲೇ ಷಡ್ಯಂತ್ರ ನಡೆಯುತ್ತದೆ ಎಂಬ ಮುಖ್ಯಮಂತ್ರಿ ಹೇಳಿಕೆಗೆ ತಿರುಗೇಟು ನೀಡಿರುವ ಅವರು, ದೀಪ ಆರುವ ಮುನ್ನ ಜೋರಾಗಿ ಹೊತ್ತಿ ಉರಿಯುತ್ತದೆ, ಕಾಲವೇ ನಿಮಗೆ ಉತ್ತರ ಸಿಗಲಿದೆ ಎಂದು ಸೂಚ್ಯವಾಗಿ ಹೇಳಿದ್ದಾರೆ.

ನೀವು ಮುಖ್ಯಮಂತ್ರಿಯಾಗುವ ವೇಳೆ ಉಪಮುಖ್ಯಮಂತ್ರಿಯಾಗಿರುವ ಡಿ.ಕೆ.ಶಿವಕುಮಾರ್‌ ಜೊತೆ ಮಾಡಿಕೊಂಡಿರುವ ಒಡಂಬಡಿಕೆ ಬದಿಗೊತ್ತಿ ಹೈಕಮಾಂಡ್‌ ಸೂತ್ರ ಧಿಕ್ಕರಿಸುವ ನಿಮ ತಂತ್ರದ ಜಾಡು ಹಿಡಿದಿರುವ ನಿಮ ವಿರೋಧಿ ಬಣ ಸುಮನೆ ಕುಳಿತಿಲ್ಲ, ಮುಖ್ಯಮಂತ್ರಿ ಅಧಿಕಾರ ಹಂಚಿಕೆಯ ಕಾಲ ಸನ್ನಿಹಿತವಾಗುವುದರೊಳಗೇ ಪರಿಸ್ಥಿತಿ ಯಾವ ರೀತಿ ಬಿಗಡಾಯಿಸುತ್ತದೆ ಎನ್ನುವುದನ್ನು ಕಾಂಗ್ರೆಸ್‌‍ನಲ್ಲಿ ವ್ಯೂಹ ರಚಿಸುವ ಬಂಡೆಯೊಂದು ಈಗಾಗಲೇ ಸದ್ದು ಮಾಡುತ್ತಿದೆ ಎಂದು ಕೈಯೊಳಗಿನ ಅಧಿಕಾರ ಹಂಚಿಕೆ ಕುರಿತಂತೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

 ಬಿಜೆಪಿ ತತ್ವ, ಸಿದ್ಧಾಂತ ಆಧರಿಸಿದ ಶಿಸ್ತಿನ ಪಕ್ಷ. ಕಳೆಯಿಲ್ಲದೆ ಬೆಳೆದು ನಿಂತಿರುವ ಸಮೃದ್ಧ ತೋಟ, ನಿಮ ಕಾಂಗ್ರೆಸ್‌‍ ನಲ್ಲಿರುವ ಪಾರ್ಥೇನಿಯಂ ಗಿಡಗಳು ನಮಲ್ಲಿಲ್ಲ, ಅಧಿಕಾರಕ್ಕಾಗಿ ಹಪಾಹಪಿಸುವ ಕಳ್ಳಿ ಗಿಡಗಳಾವುವೂ ನಮ ಪಕ್ಷದಲ್ಲಿ ತಲೆಯೆತ್ತಲು ಸಾಧ್ಯವಿಲ್ಲ. ತಲೆ ಎತ್ತಲು ಹೋದರೆ ಅದಕ್ಕೆ ಮದ್ದು ನೀಡುವಷ್ಟು ನಮ ವರಿಷ್ಠ ಮಂಡಳಿಯು ಸಶಕ್ತವಾಗಿದೆ ಎಂದು ಪಕ್ಷದ ನಾಯಕತ್ವವನ್ನು ಅವರು ಬಲವಾಗಿ ಸಮರ್ಥಿಸಿಕೊಂಡಿದ್ದಾರೆ.

 ಭಾರತದ ರಾಜಕೀಯ ಭೂಪಟದಲ್ಲಿ ಮಾಸಿ ಹೋಗುತ್ತಿರುವ ನಿಮ ಕಾಂಗ್ರೆಸ್‌‍ ಪಕ್ಷ ಅಧಿಕಾರ ಕಬಳಿಸುವುದನ್ನಷ್ಟೇ ಕೇಂದ್ರೀಕರಿಸಿ ಸುಳ್ಳು ಭರವಸೆಗಳು ಹಾಗೂ ಆಮಿಷಗಳ ಬಲೆ ಹೆಣೆದು ಕರ್ನಾಟಕದಲ್ಲಿ ಅಧಿಕಾರ ದಕ್ಕಿಸಿಕೊಂಡಿದೆ. ಲೋಕಸಭಾ ಚುನಾವಣೆಯ ನಂತರ ಈ ಟೊಳ್ಳು ಬಲೆಯನ್ನು ಜನರೇ ತುಂಡರಿಸಲಿದ್ದಾರೆ, ನಿಮ ಬಣ ರಾಜಕೀಯದ ಕಿತ್ತಾಟದ ಬಣ್ಣ ಶೀಘ್ರದಲ್ಲೇ ಬಯಲಿಗೆ ಬರಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ವಿಜಯೇಂದ್ರ ಸಿಎಂ ಸಿದ್ದರಾಮಯ್ಯನವರಿಗೆ ಎಚ್ಚರಿಕೆ ಕೊಟ್ಟಿದ್ದಾರೆ.

 

 

Facebook
Twitter
LinkedIn
Telegram
WhatsApp
Email
Print

Leave a Comment

Your email address will not be published. Required fields are marked *

Translate »
Scroll to Top